

ದೂರು ನೀಡಿದರೂ ಕ್ರಮವಿಲ್ಲ; ಬೀಜ–ರಸಗೊಬ್ಬರ ಮಾರಾಟ ಕೇಂದ್ರದ ವಿರುದ್ಧ ತನಿಖೆಗೆ ಆಗ್ರಹ
ಇಂಡಿ: ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟ ಕೇಂದ್ರದ ವಿರುದ್ಧ ದೂರು ಸಲ್ಲಿಸಿದ್ದರೂ ಕೃಷಿ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ.
ಮಾರಾಟ ಕೇಂದ್ರದ ವಿರುದ್ಧ ಜುಲೈ 29ರಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಲಾಗಿತ್ತು. ಆದರೆ ದೂರು ಸಲ್ಲಿಸಿ ದಿನಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸದೆ, ದೂರಿನ ಕುರಿತು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸಂಘಟನೆ ಆರೋಪಿಸಿದೆ.
ಈ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿರುವ ಸಂಘಟನೆ, ಮಾರಾಟ ಕೇಂದ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ, ಸ್ಥಳ ಪರಿಶೀಲನೆ ನಡೆಸಿ, ದೂರಿನ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದೆ.
ಅಧಿಕಾರಿಗಳ ಕರ್ತವ್ಯಲೋಪ ಅಥವಾ ನಿರ್ಲಕ್ಷ್ಯ ದೃಢಪಟ್ಟಲ್ಲಿ ಅವರ ವಿರುದ್ಧವೂ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ರೈತರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ತನಿಖೆ ನಡೆಸಬೇಕು ಎಂದು ಸಂಘಟನೆ ಆಗ್ರಹಿಸಿದೆ.